11 November 2026 |

ಪುತ್ತೂರಿನಲ್ಲಿ ಕಾರು ಡಿಕ್ಕಿ: ಬೆಂಕಿಗಾಹುತಿಯಾದ ಬೈಕ್, ಸವಾರ ಪವಾಡಸದೃಶ ಪಾರು

  • 11 Nov 2026 02:16:31 PM

ಪುತ್ತೂರು: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ನಡೆದಿದೆ.

 

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಏಕಮುಖ ಸಂಚಾರದ ರಸ್ತೆಯಲ್ಲಿ ಏಕಾಏಕಿ ವಿರುದ್ಧ ದಿಕ್ಕಿನ ಮಾರ್ಗಕ್ಕೆ ಪಥ ಬದಲಾಯಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

 

ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಬಿದ್ದ ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ತಕ್ಷಣ ಯಾವುದೇ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಬೈಕ್ ಬಹುತೇಕ ಸಂಪೂರ್ಣವಾಗಿ ಸುಟ್ಟುಹೋಗಿದೆ.

 

ಘಟನೆಯಲ್ಲಿ ಬೈಕ್ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಚಿನ ಅನಾಹುತ ಸಂಭವಿಸದಿರುವುದು ಸಮಾಧಾನಕರವಾಗಿದೆ.