ಶಿವಮೊಗ್ಗ: ಜಮೀನು ಮಂಜೂರು ಮಾಡಿಕೊಡುವಂತೆ ಹಣ ನೀಡಿದ್ದರೂ ಅಧಿಕಾರಿಗಳು ಕೆಲಸ ಮಾಡಿಕೊಡದೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರೊಬ್ಬರು ಜಿಲ್ಲಾಧಿಕಾರಿ ಕಚೇರಿ ಎದುರಿನ ಆಲದ ಮರವೇರಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ (ನ.11) ನಡೆದಿದೆ.
ಶಿವಮೊಗ್ಗ ತಾಲ್ಲೂಕಿನ ರಾಮೀನಕೊಪ್ಪ ಗ್ರಾಮದ ನಾಗರಾಜ್ ಪ್ರತಿಭಟನೆ ನಡೆಸಿದ ರೈತ. ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್ ಹಣ ಪಡೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಧಿಕಾರಿಗಳ ಲಂಚದ ಬೇಡಿಕೆ ಹಾಗೂ ನಿರಂತರ ವಿಳಂಬದಿಂದ ಬೇಸತ್ತು ಈ ರೀತಿಯ ಪ್ರತಿಭಟನೆಗೆ ಮುಂದಾಗಬೇಕಾಯಿತು ಎಂದು ನಾಗರಾಜ್ ತಿಳಿಸಿದ್ದಾರೆ.
ಇದೇ ವೇಳೆ ನಾಗರಾಜ್ ಅವರ ಕುಟುಂಬದ 12 ಮಂದಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿಯೂ ಸ್ಥಳಕ್ಕೆ ಧಾವಿಸಿ, ಮರದ ಮೇಲಿದ್ದ ನಾಗರಾಜ್ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲು ಕ್ರಮ ಕೈಗೊಂಡರು.
ತಮ್ಮ ಜಮೀನನ್ನು ಕೂಡಲೇ ಮಂಜೂರು ಮಾಡಬೇಕು ಹಾಗೂ ಲಂಚದ ಆರೋಪ ಎದುರಿಸುತ್ತಿರುವ ಅಧಿಕಾರಿಯ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ನಾಗರಾಜ್ ಕುಟುಂಬದವರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.





