ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಕರೋಪಾಡಿ ಮೂಲದ ಚಾಲಕ ಒ.ಪಿ. ಅಬ್ದುಲ್ಲಾ (45) ಮತ್ತು ಸುಬ್ರಹ್ಮಣ್ಯ (55) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ಜಾನುವಾರುಗಳ ಸಾಗಣೆಗೆ ಸಂಬಂಧಿಸಿದ ಯಾವುದೇ ಅಧಿಕೃತ ಪರವಾನಗಿ ಹೊಂದಿರದಿರುವುದು ತಿಳಿದುಬಂದಿದೆ.
ವಿಚಾರಣೆ ವೇಳೆ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಅವರ ಸೂಚನೆಯಂತೆ ಜಾನುವಾರುಗಳನ್ನು ಸಾಗಿಸುತ್ತಿರುವುದಾಗಿ ಇಬ್ಬರೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಪೊಲೀಸರು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ್ದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಒ.ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಮತ್ತು ಗುರುತೇಜ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.





