ಮಂಗಳೂರು: ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಚಿವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ನಿಯೋಗ ಆತ್ಮೀಯವಾಗಿ ಬರಮಾಡಿಕೊಂಡಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಮತ್ತು ಭರತ್ ಶೆಟ್ಟಿ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಕೇಂದ್ರ ಸಚಿವರ ಮಂಗಳೂರು ಭೇಟಿ ಕರಾವಳಿ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿರೀಕ್ಷೆ ಮೂಡಿಸಿದೆ. ವಿಶೇಷವಾಗಿ ರೈಲು ಸಂಪರ್ಕ ವಿಸ್ತರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಯಾಣಿಕರಿಗೆ ಅಗತ್ಯವಿರುವ ಸೌಲಭ್ಯಗಳ ಸುಧಾರಣೆಯ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದಿದೆ.





