ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಕೊಲ್ನಾಡು ನಿವಾಸಿ ಮೊಹಮ್ಮದ್ ಮಿಸ್ಸಾ (21) ನ್ಯಾಯಾಲಯಕ್ಕೆ ಹಾಜರಾಗಿದ್ದು, ಪೊಲೀಸರು ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ ಅವರು ಫೆಬ್ರವರಿ 4ರಂದು ಮನೆಯ ಬಾಗಿಲಿಗೆ ಬೀಗ ಹಾಕಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದರು. ಕಾರ್ಯಕ್ರಮ ಮುಗಿಸಿ ರಾತ್ರಿ ಮನೆಗೆ ವಾಪಸಾದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಅವರ ಗಮನಕ್ಕೆ ಬಂದಿತ್ತು.
ತಕ್ಷಣ ಮನೆಯೊಳಗೆ ಪರಿಶೀಲನೆ ನಡೆಸಿದಾಗ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ತಿಳಿದುಬಂದಿತ್ತು. ಕಳವಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು 8 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸತೀಶ್ ಶೆಣೈ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕಳವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದೀಗ ಪ್ರಕರಣದ ಆರೋಪಿ ಮೊಹಮ್ಮದ್ ಮಿಸ್ಸಾ ನ್ಯಾಯಾಲಯಕ್ಕೆ ಶರಣಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಆತನನ್ನು ಎರಡು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.





