ಕೋಲ್ಕತ್ತಾ: ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, 67 ವರ್ಷದ ಪುತ್ರನೊಬ್ಬ ತನ್ನ 85 ವರ್ಷದ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲ್ಕತ್ತಾದ ನೈಋತ್ಯ ಭಾಗದಲ್ಲಿರುವ ಹರಿದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ಮೃತರನ್ನು ಉಮಾರಾಣಿ ಘೋಷ್ (85) ಎಂದು ಗುರುತಿಸಲಾಗಿದ್ದು, ಅವರ ಪುತ್ರ ಸಾಗರ್ ಘೋಷ್ (67) ಕೊಲೆ ಆರೋಪಿಯಾಗಿದ್ದಾನೆ.
ತಾಯಿಯನ್ನು ಹತ್ಯೆ ಮಾಡಿದ ಬಳಿಕ ಸಾಗರ್ ಘೋಷ್ ತಾನೇ ತುರ್ತು ಸಹಾಯವಾಣಿ 100ಕ್ಕೆ ಕರೆ ಮಾಡಿ, ತಾಯಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವೃದ್ಧೆಯ ಮೃತದೇಹವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ತಾಯಿ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಯ ಖರ್ಚುಗಳನ್ನು ಭರಿಸಲು ತನ್ನಿಂದ ಸಾಧ್ಯವಾಗುತ್ತಿರಲಿಲ್ಲ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.
ವೃದ್ಧೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





