18 November 2026 |

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ; ಪೈಲಟ್ ಸಮಯಪ್ರಜ್ಞೆಯಿಂದ 236 ಮಂದಿ ಪ್ರಾಣಾಪಾಯದಿಂದ ಪಾರು!

  • 17 Nov 2026 10:44:55 AM

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ಕೊನೆಯ ಕ್ಷಣದಲ್ಲಿ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್‌ನ ಸಮಯೋಚಿತ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ತಪ್ಪಿದೆ.

 

ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಜನರು ಪ್ರಯಾಣಿಸುತ್ತಿದ್ದರು.

 

ವಿಮಾನವು ಟೇಕ್ ಆಫ್ ಆಗಲು ರನ್‌ವೇಯಲ್ಲಿ ವೇಗ ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣವೇ ಪರಿಸ್ಥಿತಿಯನ್ನು ಅರಿತ ಪೈಲಟ್ ವಿಮಾನವನ್ನು ನಿಯಂತ್ರಿಸಿ, ಟೇಕ್ ಆಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ. ಬಳಿಕ ವಿಮಾನಕ್ಕೆ ಬ್ರೇಕ್ ಹಾಕಿ ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ನಂತರ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಬೆಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರಿಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 

ಪೈಲಟ್ ಕೊನೆಯ ಕ್ಷಣದಲ್ಲಿ ತೋರಿದ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ ಎಲ್ಲಾ 236 ಮಂದಿ ಸುರಕ್ಷಿತವಾಗಿರುವುದು ನಿಟ್ಟುಸಿರು ಬಿಡುವಂತಾಗಿದೆ.