ಬೆಂಗಳೂರು: ಕಾಲೇಜಿನ ಪ್ರಾಜೆಕ್ಟ್ ಕೆಲಸದ ನಿಮಿತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಂಡ ಭೀಕರ ರಸ್ತೆ ಅಪಘಾತಕ್ಕೆ ಸಿಲುಕಿದ್ದು, ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಪಘಾತದಲ್ಲಿ 20 ವರ್ಷದ ವೈಷ್ಣವಿ ಮತ್ತು ಜಾಹ್ನವಿ ಮೃತಪಟ್ಟ ವಿದ್ಯಾರ್ಥಿನಿಯರು ಎಂದು ಗುರುತಿಸಲಾಗಿದೆ. ಕಾರು ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ.
ಅಪಘಾತದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯಿಂದ ವಿದ್ಯಾರ್ಥಿಗಳ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ತೀವ್ರ ದುಃಖ ಆವರಿಸಿದೆ.





