20 November 2026 |

ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

  • 19 Nov 2026 06:25:00 PM

ಮಂಗಳೂರು: ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಎನ್. ಶಶಿಕುಮಾರ್ ಅವರು ಗುರುವಾರ (ನ.19) ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

 

ಮಂಗಳೂರಿನ ಪಾಂಡೇಶ್ವರದಲ್ಲಿರುವ ಐಜಿಪಿ ಕಚೇರಿಗೆ ಆಗಮಿಸಿದ ಅವರನ್ನು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಾರ್ಡ್ ಆಫ್ ಆನರ್ ನೀಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು.

 

ನಂತರ ಪ್ರಭಾರ ಐಜಿಪಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶಶಿಕುಮಾರ್ ಅವರು ಅಧಿಕಾರ ಸ್ವೀಕರಿಸಿದರು.

 

ಅಧಿಕಾರ ವಹಿಸಿಕೊಂಡ ಬಳಿಕ ಪಶ್ಚಿಮ ವಲಯದ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡರು.

 

ಸಭೆಯ ಬಳಿಕ ಮಾತನಾಡಿದ ನೂತನ ಐಜಿಪಿ ಎನ್. ಶಶಿಕುಮಾರ್, ವಲಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದರ ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

 

ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರು ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.