ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಈ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಗಮನ ಸೆಳೆದಿವೆ.
ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಥಾರ್ ಜೀಪಿನಲ್ಲಿ ಬಲವಂತವಾಗಿ ಕೂರಿಸಿಕೊಂಡು ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಘಟನೆ ನಡೆದಿದೆ ಎಂಬ ಶಂಕೆಯೂ ವ್ಯಕ್ತವಾಗಿದೆ.
ಕೆಲವರು ಸೇರಿಕೊಂಡು ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯನ್ನು ಎಳೆದುಕೊಂಡು ಹೋಗಿ ವಾಹನಕ್ಕೆ ಹತ್ತಿಸುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದೆ.
ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಪ್ರಾಪ್ತ ವಯಸ್ಕರಾದ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬದ ಸದಸ್ಯರೇ ಅಥವಾ ಸಂಬಂಧಿಕರೇ ಬಲವಂತವಾಗಿ ಕರೆದೊಯ್ದಿರುವುದು ದೃಢಪಟ್ಟರೆ, ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸೂಚಿಸಲಾಗಿದೆ.





