22 November 2026 |

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ

  • 21 Nov 2026 11:14:38 AM

ಮಂಜೇಶ್ವರ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸರಕು ಸಾಗಣೆ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಮಣ್ಣಂಕುಳಿಯಲ್ಲಿ ಸಂಭವಿಸಿದೆ.

 

ಬಾಯಾರಿನಿಂದ ಉಪ್ಪಳದತ್ತ ಸಂಚರಿಸುತ್ತಿದ್ದ ಖಾಸಗಿ ಬಸ್, ರಸ್ತೆ ಬದಿಯಲ್ಲಿ ನಿಲುಗಡೆ ಮಾಡಲಾಗಿದ್ದ ಲಾರಿಯ ಹಿಂಭಾಗಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ.

 

ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಮಂಗಲ್ಪಾಡಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ಸಮೀಪದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಗಾಯಗೊಂಡವರ ಪೈಕಿ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

 

ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸರಕು ಸಾಗಣೆ ಲಾರಿಯನ್ನು ಕಳೆದ ಎರಡು ದಿನಗಳಿಂದ ಅದೇ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

 

ಅಪಘಾತದ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಸ್ ಲಾರಿಗೆ ಡಿಕ್ಕಿ ಹೊಡೆಯಲು ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.