ಚಿಕ್ಕಮಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 26 ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೊನೆಯ ಕ್ಷಣದವರೆಗೂ ಹೋರಾಡಿದ 65 ವರ್ಷದ ಚಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಗ್ರಾಮದ ಬಳಿ ನಡೆದಿದೆ.
ಮೃತ ಚಾಲಕನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಸವನಿ ಗ್ರಾಮದ ನಿವಾಸಿ ಲಕ್ಷ್ಮಣ್ (65) ಎಂದು ಗುರುತಿಸಲಾಗಿದೆ.
ಲಕ್ಷ್ಮಣ್ ಅವರು 26 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ದಿಢೀರ್ ಎದೆನೋವಿನಿಂದ ಅಸ್ವಸ್ಥರಾಗಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಬಸ್ಸಿನ ನಿಯಂತ್ರಣ ಕಳೆದುಕೊಳ್ಳದೆ ವಾಹನವನ್ನು ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಸ್ ನಿಂತ ಬಳಿಕ ಚಾಲಕ ಲಕ್ಷ್ಮಣ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 26 ವಿದ್ಯಾರ್ಥಿಗಳು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿಯಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಘಟನೆ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಮಾಹಿತಿಯಲ್ಲಿ ತಿಳಿಸಲಾಗಿದೆ.
ತಮ್ಮ ಜೀವದ ಹಂಗು ತೊರೆದು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದ ಲಕ್ಷ್ಮಣ್ ಅವರ ಕಾರ್ಯ ಸಾರ್ವಜನಿಕರ ಮನಮುಟ್ಟಿದೆ. ಮಕ್ಕಳ ಜೀವ ಉಳಿಸುವಲ್ಲಿ ತೋರಿದ ಅವರ ಜವಾಬ್ದಾರಿ ಮತ್ತು ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.





