ಬಂಟ್ವಾಳ: ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿದೆ.
2021ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ಪಕ್ಕದಲ್ಲೇ ವಾಸಿಸುತ್ತಿದ್ದ ಅನಿಲ್ ಎಂಬಾತನ ವಿರುದ್ಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆ ಸಮಯದಲ್ಲಿ ಪ್ರಕರಣದ ತನಿಖೆಯ ಜವಾಬ್ದಾರಿ ವಹಿಸಿಕೊಂಡಿದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿ ತನಿಖೆ ನಡೆಸಿದ್ದರು. ಬಳಿಕ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಜೇಶ್ ಮಾರುತಿ ಕಾಮಟೆ ಅವರು ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.





