ಮಂಗಳೂರು: ವಿಮಾನ ದುರಂತ ಸಂಭವಿಸಿದ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಹೇಗೆ ತ್ವರಿತವಾಗಿ ಕಾರ್ಯಪ್ರವೃತ್ತರಾಗಬೇಕು ಮತ್ತು ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಬೇಕು ಎಂಬುದನ್ನು ಪ್ರದರ್ಶಿಸುವ ಉದ್ದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರವಲಯದಲ್ಲಿ ಬೃಹತ್ ಅಣಕು ಕಾರ್ಯಾಚರಣೆ ನಡೆಸಲಾಯಿತು.
ಈ ಅಣಕು ಕಾರ್ಯಾಚರಣೆಯಲ್ಲಿ ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನವೊಂದು ಬೆಳಗ್ಗೆ 10.20ಕ್ಕೆ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಮರವೂರಿನ ಗುರುಪುರ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ ಎಂಬ ಸನ್ನಿವೇಶವನ್ನು ಸೃಷ್ಟಿಸಲಾಗಿತ್ತು.
ವಿಮಾನದಲ್ಲಿ 117 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿ ಇದ್ದರು ಎಂದು ಪರಿಗಣಿಸಲಾಗಿತ್ತು. ಈ ಕಾಲ್ಪನಿಕ ದುರಂತದಲ್ಲಿ 9 ಮಂದಿ ಮೃತಪಟ್ಟಿದ್ದು, 42 ಜನರಿಗೆ ಗಂಭೀರ ಸುಟ್ಟ ಗಾಯಗಳು, 21 ಮಂದಿಗೆ ಮಧ್ಯಮ ಪ್ರಮಾಣದ ಗಾಯಗಳು ಹಾಗೂ 45 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಸನ್ನಿವೇಶ ರೂಪಿಸಲಾಗಿತ್ತು.
ಮಾಹಿತಿ ಲಭಿಸಿದ ತಕ್ಷಣ ವಿವಿಧ ಇಲಾಖೆಗಳ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದವು. ಡಮ್ಮಿ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿರುವಂತೆ ಸಿದ್ಧಪಡಿಸಿ, ಬೆಂಕಿ ನಂದಿಸುವುದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವುದು ಹಾಗೂ ಗುರುಪುರ ನದಿಯಲ್ಲಿ ಬಿದ್ದಿರುವ ಪ್ರಯಾಣಿಕರಿಗಾಗಿ ಶೋಧ ನಡೆಸುವ ಕಾರ್ಯಗಳನ್ನು ಪ್ರಾಯೋಗಿಕವಾಗಿ ಕೈಗೊಳ್ಳಲಾಯಿತು.
ಗಾಯಾಳುಗಳನ್ನು ಅವರ ಸ್ಥಿತಿಗತಿಗೆ ಅನುಗುಣವಾಗಿ ವಿಂಗಡಿಸಿ, ಆಂಬುಲೆನ್ಸ್‌ಗಳ ಮೂಲಕ ನಗರದ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಯಿತು. ಇದಕ್ಕಾಗಿ ಪ್ರಮುಖ ನಗರ ರಸ್ತೆಗಳು ಹಾಗೂ ಹೆದ್ದಾರಿಗಳಲ್ಲಿ ಗ್ರೀನ್ ಕಾರಿಡಾರ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಈ ಕಾರ್ಯಾಚರಣೆಯಲ್ಲಿ ಜಿಲ್ಲಾಡಳಿತ, ವಿಮಾನ ನಿಲ್ದಾಣ ಪ್ರಾಧಿಕಾರ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು. ಇದರೊಂದಿಗೆ ಆರೋಗ್ಯ ಇಲಾಖೆ, ವಿವಿಧ ಆಸ್ಪತ್ರೆಗಳ ವೈದ್ಯರು, ನರ್ಸ್‌ಗಳು, ಆಂಬುಲೆನ್ಸ್ ಸಿಬ್ಬಂದಿ, ವಿವಿಧ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಹಾಗೂ ಕಾಲೇಜುಗಳ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸಹಕರಿಸಿದರು.
ವಿಮಾನ ದುರಂತದಂತಹ ತುರ್ತು ಪರಿಸ್ಥಿತಿಯಲ್ಲಿ ವಿವಿಧ ಇಲಾಖೆಗಳ ನಡುವಿನ ಸಮನ್ವಯ, ರಕ್ಷಣಾ ವ್ಯವಸ್ಥೆಯ ಸಿದ್ಧತೆ ಮತ್ತು ಗಾಯಾಳುಗಳನ್ನು ತ್ವರಿತವಾಗಿ ಸ್ಥಳಾಂತರಿಸುವ ಸಾಮರ್ಥ್ಯವನ್ನು ಪರಿಶೀಲಿಸುವುದು ಈ ಅಣಕು ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿತ್ತು.





