ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಯ ಹೊಸ ಕಟ್ಟಡದ ನಿರ್ಮಾಣ ವೇಗವಾಗಿ ಸಾಗುತ್ತಿದೆ. ಸುಮಾರು ರೂ. 18 ಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ಅನ್ನು ಜಾರಿಗೆ ತರಲಾಗುತ್ತಿದೆ.
ಈ ಕಟ್ಟಡವನ್ನು ಶೈಕ್ಷಣಿಕ ಸೌಲಭ್ಯಗಳು, ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ಪರಿಸರವನ್ನು ಒದಗಿಸುವ ಉದ್ದೇಶದಿಂದಲೇ ಈ ಯೋಜನೆ ಕೈಗೊಳ್ಳಲಾಗಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕೆಲ ದಿನಗಳ ಹಿಂದೆ ಹೊಸದಾಗಿ ನಿರ್ಮಾಣವಾಗುತ್ತಿರುವ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಯ ಕಟ್ಟಡವನ್ನು ಪರಿಶೀಲಿಸಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖೆಯ ಅಧಿಕಾರಿಗಳು ಮತ್ತು ಇಂಜಿನಿಯರ್ ಗಳಿಂದ ಮಾಹಿತಿ ಪಡೆದರು.