ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವುದರಿಂದ ಜುಲೈ 25ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಆದೇಶವು ಅಂಗನವಾಡಿಗಳಿಂದ ಹಿಡಿದು ಪ್ರಾಥಮಿಕ, ಪ್ರೌಢ, ಹಾಗೂ ಪದವಿಪೂರ್ವ ಶಿಕ್ಷಣ ಸಂಸ್ಥೆಗಳವರೆಗೆ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂಕುಸಿತದ ಅಪಾಯವಿರುವ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು, ಸ್ಥಳೀಯ ಆಡಳಿತ ಯಂತ್ರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳು, ನದೀ ತೀರಗಳು ಹಾಗೂ ಕಡಲ್ಕಿನಾರೆಯ ಕಡೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದೆ ಎಚ್ಚರಿಕೆಯಿಂದ ಇರಬೇಕು ಎಂಬ ಸೂಚನೆಯೂ ನೀಡಲಾಗಿದೆ.
ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದ್ದು, ತಮ್ಮ ಜೀವದ ಹಿತಕ್ಕಾಗಿ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಹೇಳಿದ್ದಾರೆ.